ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು
ಮಾರ್ಕ 5:22-43; ಲೂಕ 8:41-56
18ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು. 19ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.
20ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು, 21“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. 22ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
23ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, 24“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು. 25ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು. 26ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.
27ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು. 28ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು. 29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು. 30ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು. 31ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.
32ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು. 33ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು. 34ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.


